September 20, 2024

ಶಿಶುಪಾಲನಾ ಕೇಂದ್ರ – ಶಾಲಾ ಪೂರ್ವ ತರಗತಿ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ

0
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕೇಂದ್ರಗಳಲ್ಲಿಯೇ ಶಿಶುಪಾಲನಾ ಕೇಂದ್ರ ಮತ್ತು ಶಾಲಾ ಪೂರ್ವ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಇಂದು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ವತಿಯಿಂದ ನೂರಾರು ಮಹಿಳೆಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಿ, ಈ ವೇಳೆ ಮಾತನಾಡಿದ ಫೆಡರೇಷನ್ ಜಿಲ್ಲಾಧ್ಯಕ್ಷೆ ಗ್ರೇಟ ಫರ್ನಾಂಡೀಸ್ ಅಂಗನವಾಡಿ ವ್ಯವಸ್ಥೆಗೆ ವಿರುದ್ಧವಾಗಿ ಹಾಗೂ ಪರ್ಯಾಯವಾಗಿ ಶಿಶುಪಾಲನಾ ಕೇಂದ್ರಗಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಹೊರಡಿಸಿರುವ ಆದೇಶಗಳನ್ನು ಹಿಂಪಡೆದು ಅಂಗನವಾಡಿ ಕೇಂದ್ರಗಳಲ್ಲಿಯೇ ಶಾಲಾ ಪೂರ್ವ ತರಗತಿಗಳನ್ನು ನಡೆಸಲು ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಳೆದ ನಾಲ್ಕು ದಶಕಗಳಿಂದ ಶೂನ್ಯದಿಂದ ೬ ವರ್ಷದ ವಯೋಮಾನದ ಮಕ್ಕಳಿಗೆ ಸಮಗ್ರ ಶಿಶು ಅಭಿವೃದ್ದಿ ಯೋಜನೆಯ ಮೂಲಕ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಲಾಲನೆ, ಪೌಷ್ಠಿಕ ಆಹಾರ, ಶಾಲಾ ಪೂರ್ವ ಶಿಕ್ಷಣ ಇತ್ಯಾದಿ ಸೇವೆಗಳನ್ನು ಕಾರ್ಯಕರ್ತೆಯರು ನಡೆಸಿಕೊಂಡು ಬರುತ್ತಿದ್ದಾರೆ ಎಂದು ತಿಳಿಸಿದರು.

ಇದೀಗ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿರುವ ಅದೇ ಜಾಗಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಮತ್ತು ಶಾಲಾ ಪೂರ್ವ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿರುವುದರಿಂದ ಅಂಗನವಾಡಿ ಕೇಂದ್ರಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಿದರು.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ನರೇಗಾ ಯೋಜನೆಯಡಿ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಪ್ರಾರಂಭಿಸಲು ಸಿದ್ದತೆ ಭರದಿಂದ ಸಾಗಿದೆ. ಇದಕ್ಕೆ ಸಂಬಂಧಿಸಿದ ಇಲಾಖೆಗಳು ಸುತ್ತೋಲೆಗಳನ್ನು ಹೊರಡಿಸಿ ಅಂಗನವಾಡಿ ನಿರ್ವಹಿಸಬೇಕಾದ ಕೆಲಸಗಳನ್ನು ಪರ್ಯಾಯವಾಗಿ ಮಾಡಲು ಹೊರಟರೆ ಹಂತ-ಹಂತವಾಗಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಆ ನಿಟ್ಟಿನಲ್ಲಿ ಸದೃಢವಾದ ಅಂಗನವಾಡಿ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವಾಗ ಅದಕ್ಕೆ ಪರ್ಯಾಯವಾಗಿ ಬೇರೆ ಬೇರೆ ಇಲಾಖೆಗಳು ತರಗತಿಗಳನ್ನು ಪ್ರಾರಂಭಿಸಿದರೆ ಅನಗತ್ಯವಾಗಿ ಸರ್ಕಾರದ ಹಣ ಪೋಲಾಗಲಿದೆ ಎಂದು ಹೇಳಿದರು.

ಕಾಂಗ್ರೆಸ್ ನೇತೃತ್ವದ ರಾಜ್ಯಸರ್ಕಾರ ಚುನಾವಣಾ ಪೂರ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ಗೌರವಧನ ಹಾಗೂ ನಿವೃತ್ತರಿಗೆ ೩ ಲಕ್ಷ ಇಡುಗಂಟು ನೀಡುವ ಭರವಸೆಯನ್ನು ೬ನೇ ಗ್ಯಾರಂಟಿಯಾಗಿ ಘೋಷಿಸಿದ್ದು, ಇದನ್ನು ಕೂಡಲೇ ಜಾರಿಗೊಳಿಸಬೇಕು. ಗ್ಯಾಚ್ಯುಟಿ ಪಡೆಯಲು ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಅರ್ಹರು ಎಂಬುದಾಗಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ರಾಜ್ಯದಲ್ಲಿ ಜಾರಿಗೊಳಿಸಲು ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪ ಬಸವರಾಜು, ತಾಲ್ಲೂಕು ಅಧ್ಯಕ್ಷೆ ಶೈಲಾ ಬಸವರಾಜ್, ಕಾರ್ಯದರ್ಶಿ ವಸಂತ ಧರ್ಮಯ್ಯ, ಸದಸ್ಯರುಗಳಾದ ಭಾಗ್ಯ, ಅನುಸೂಯ, ಗೌರಮ್ಮ, ಸವಿತಾ, ಚಂದ್ರಕಲಾ, ಧನಲಕ್ಷ್ಮೀ, ಪೂರ್ಣಿಮಾ, ಪ್ರೇಮ ಮತ್ತಿತರರು ಹಾಜರಿದ್ದರು.

Anganwadi workers protest

About Author

Leave a Reply

Your email address will not be published. Required fields are marked *