September 16, 2024

ಬರ ಪರಿಹಾರಕ್ಕಾಗಿ ಸಿಎಂ ವಿಶೇಷ ಅಸಕ್ತಿ ವಹಿಸಿದ್ದಾರೆ

0
ಬರಗಾಲ ಪೀಡಿತ ಗ್ರಾಮದ ಜಮೀನುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಜಾರ್ಜ್ ಭೇಟಿ

ಬರಗಾಲ ಪೀಡಿತ ಗ್ರಾಮದ ಜಮೀನುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಜಾರ್ಜ್ ಭೇಟಿ

ಚಿಕ್ಕಮಗಳೂರು: ಬರಗಾಲದಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಆಸಕ್ತಿ ವಹಿಸಿದ್ದಾರೆ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಮಳೆ ಕೊರತೆಯಿಂದ ಬೆಳೆ ಹಾನಿಯಾದ ಕಡೂರು ತಾಲ್ಲೂಕಿನ ಬ್ರಹ್ಮ ಸಮುದ್ರ ಹಾಗೂ ರಾಮನಹಳ್ಳಿ ಗ್ರಾಮದ ರೈತರಾದ ಪ್ರಕಾಶ್ ಮತ್ತು ಚಿಕ್ಕಣ್ಣ ಇವರ ರಾಗಿ ಹಾಗೂ ಜೋಳ ಬೆಳೆದ ಜಮೀನುಗಳಿಗೆ ಬುಧವಾರ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯ ಸರ್ಕಾರ ರೈತರಿಗೆ ಸಾಧ್ಯವಾದ ಎಲ್ಲ ರೀತಿಯ ನೆರವು ನೀಡಲು ಸಿದ್ದತೆ ಮಾಡಿಕೊಳ್ಳುತ್ತಿದೆ. ಬರದಿಂದ ನಷ್ಟ ಅನುಭವಿಸುತ್ತಿರುವ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಸೌಲಭ್ಯ ಕೊಡಿಸಲು ಪ್ರಯತ್ನ ಮಾಡಲಾಗುತ್ತಿದೆ. ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಬರದ ವಾಸ್ತವ ಚಿತ್ರಣ ಅರಿಯಲು ರೈತರ ಜಮೀನುಗಳಿಗೆ ಭೇಟಿ ನೀಡಲಾಗುತ್ತಿದೆ ಎಂದರು.

ಅಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿ ವಾಸ್ತವ ಮಾಹಿತಿಯನ್ನು ಸರ್ಕಾರಕ್ಕೆ ನೀಡಬೇಕು. ರೈತರು ಸಹ ಬೆಳೆ ನಷ್ಟದ ಮಾಹಿತಿಯನ್ನು ತಾವೇ ಆನ್‌ಲೈನ್ ಮೂಲಕ ಚಿತ್ರ ಸಹಿತ ಕೃಷಿ ಇಲಾಖೆಗೆ ಸಲ್ಲಿಸಬಹುದು. ಸರಿಯಾದ ಮಾಹಿತಿ ನೀಡದ ಅಧಿಕಾರಿಗಳ ಮೇಲೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ನಾಲ್ಕು ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ. ಉಳಿದ ಕೆಲ ಹೋಬಳಿಯನ್ನು ಪಟ್ಟಿಗೆ ಸೇರಿಸಲಾಗುವುದು ಎಂದು ತಿಳಿಸಿದರು.

ಕೇಂದ್ರಕ್ಕೆ ರಾಜ್ಯ ಸರ್ಕಾರ ಪಾವತಿಸಿರುವ ೪.೫ ಲಕ್ಷ ಕೋಟಿ ರೂ. ಎನ್‌ಡಿಆರ್‌ಎಫ್ ನಿಧಿಯಲ್ಲಿ ಕೇವಲ ೩೫=೪೦ ಸಾವಿರ ಕೋಟಿ ರೂ. ಮಾತ್ರ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ರಾಜ್ಯ ಸರ್ಕಾರ ಎನ್‌ಡಿಆರ್‌ಎಫ್ ನಿಧಿಗೆ ಪಾವತಿಸಿರುವ ಮೊತ್ತದಲ್ಲಿ ಹೆಚ್ಚು ಅನುದಾನ ಕೇಂದ್ರ ಸರ್ಕಾರ ನೀಡಬೇಕು. ಆಗ ರೈತರಿಗೆ ಮತ್ತಷ್ಟು ನೆರವು ನೀಡಲು ಸಾಧ್ಯವಾಗುತ್ತದೆ ಎಂದರು.

ಬರ ವೀಕ್ಷಣೆಯ ನಂತರ ಕಡೂರು ಕಾರ್ಯ ನಿರ್ವಾಹಕಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಹಾಗೂ ದನಕರುಗಳಿಗೆ ಮೇವಿಗೆ ಕೊರತೆಯಾಗದಂತೆ ಕ್ರಮವಹಿಸಬೇಕು. ಕುಡಿಯುವ ನೀರಿಗೆ ಸಮಸ್ಯೆ ಕಂಡು ಬರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಬೇಕು. ಅಮೃತ್ ಮಹಲ್ ಕಾವಲಿನಲ್ಲಿ ಮೇವು ಬೆಳೆಯಲು ಕ್ರಮವಹಿಸಬೇಕು ಎಂದ ಸಚಿವರು ಇದಕ್ಕೆ ಬೇಕಾಗುವ ಅನುದಾನವನ್ನು ಸರ್ಕಾರದಿಂದ ಒದಗಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಡೂರು ಕ್ಷೇತ್ರದ ಶಾಸಕ ಕೆ.ಎಸ್. ಆನಂದ್, ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ, ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ತರೀಕೆರೆ ಕ್ಷೇತ್ರದ ಶಾಸಕ ಜಿ.ಹೆಚ್. ಶ್ರೀನಿವಾಸ್, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ ಬಿ., ತರೀಕೆರೆ ಉಪ ವಿಭಾಗದ ಉಪ ವಿಭಾಗಾಧಿಕಾರಿ ಕಾಂತರಾಜ್ ಮುಂತಾದವರು ಹಾಜರಿದ್ದರು.

District in-charge minister for drought-affected village lands K.J. Visit George

About Author

Leave a Reply

Your email address will not be published. Required fields are marked *