September 19, 2024

ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಕ್ರಮ ವಹಿಸಿ

0
ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಸ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ ೨೦೧೩ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ

ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಸ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ ೨೦೧೩ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ

ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ನಿರ್ಮಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಎಲ್ಲಾ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಸ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ ೨೦೧೩ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರು ಸ್ವಚ್ಛತೆ ಕಾರ್ಯ ಮಾಡುವ ಸಂದರ್ಭದಲ್ಲಿ ಅವರಿಗೆ ವಿಶ್ರಾಂತಿ ಅಗತ್ಯವಿದ್ದು, ಅವರ ವಿಶ್ರಾಂತಿಗಾಗಿ ವಿಶ್ರಾಂತಿ ಗೃಹಗಳನ್ನು ಕಡ್ಡಾಯವಾಗಿ ನಿರ್ಮಿಸಬೇಕು. ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಅಗತ್ಯವಾದ ನಿವೇಶನವನ್ನು ಗುರುತಿಸಿ ಕ್ರಮ ವಹಿಸುವಂತೆ ತಿಳಿಸಿದ ಅವರು. ಪೌರಕಾರ್ಮಿಕರು ಸ್ವಚ್ಛತೆ ಸಂದರ್ಭದಲ್ಲಿ ಅವರಿಗೆ ನೀಡಿರುವ ಶೂ, ಕೈಗವಸವನ್ನು ಕಡ್ಡಾಯವಾಗಿ ಧರಿಸುವಂತೆ ತಿಳಿಸಬೇಕು.

ಪ್ರತಿ ೬ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ಎಲ್ಲಾ ಸಫಾಯಿ ಕರ್ಮಚಾರಿಗಳು ಹಾಗೂ ಪೌರಕಾರ್ಮಿಕರುಗಳಿಗೆ ಆಯುಷ್ಮಾನ ಕಾರ್ಡ್, ಪ್ರಧಾನ ಮಂತ್ರಿ ಸುರಕ್ಷಾ ಭೀಮ್ ಯೋಜನೆ ಮತ್ತು ಜೀವನ್ ಜ್ಯೋತಿ ಯೋಜನೆಯಲ್ಲಿ ಎಲ್ಲರನ್ನು ನೊಂದಾಯಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಪೌರಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.

ಪದವಿ ವ್ಯಾಸಂಗ ಮಾಡುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ನೀಡುವಂತೆ ಸದಸ್ಯರು ಜಿಲ್ಲಾಧಿಕಾರಿಗಳ ಗಮನ ಸೆಳೆದಾಗ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ದಾಖಲಾತಿ ಪಡೆದು ಲ್ಯಾಪ್ ಟಾಪ್ ವಿತರಿಸಲು ಕ್ರಮ ವಹಿಸುವಂತೆ ಹೇಳಿದರು.

ಜಿಲ್ಲೆಯಲ್ಲಿ ಶಾಲೆ, ವಿದ್ಯಾರ್ಥಿನಿಲಯಗಳಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವಂತಿಲ್ಲ. ಅಂತಹ ಪ್ರಕರಣಗಳು ಕಂಡು ಬಂದರೆ ಸಂಬಂಧಿಸಿದವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದ ಅವರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿರುವ ಸಕ್ಕಿಂಗ್ ಯಂತ್ರಗಳಿಂದ ಸರದಿ ಅನುಸಾರ ಶಾಲೆಗಳ ಶೌಚಾಲಯ ಸ್ವಚ್ಛಗೊಳಿಸಲು ಬಳಸುವಂತೆ ತಿಳಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ನಾಗರತ್ನ, ನಗರಸಭೆ ಪೌರಾಯುಕ್ತ ಬಸವರಾಜು, ಸದಸ್ಯರುಗಳಾದ ರಾಧಕೃಷ್ಣ, ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೀಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Take action for construction of rest house for civil servants

About Author

Leave a Reply

Your email address will not be published. Required fields are marked *

You may have missed