September 16, 2024

ಜನರ ಸಮಸ್ಯೆಗಳ ಪರಿಹಾರಕ್ಕೆ ಜನಸಂಪರ್ಕ ಸಭೆ ಪೂರಕ

0
ರಾಮನಹಳ್ಳಿಯಲ್ಲಿ ನಡೆದ ಜನಸಂಪರ್ಕ ಸಭೆ

ರಾಮನಹಳ್ಳಿಯಲ್ಲಿ ನಡೆದ ಜನಸಂಪರ್ಕ ಸಭೆ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಗ್ರಾಮದಲ್ಲಿಯೇ ಆಲಿಸಿ ಸರ್ಕಾರದ ಆಡಳಿತ ವ್ಯವಸ್ಥೆ ಸಾಧ್ಯವಾದಷ್ಟು ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹರಿಸಬೇಕೆಂಬ ಉದ್ದೇಶದಿಂದ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.

ಅವರು ಇಂದು ರಾಮನಹಳ್ಳಿಯಲ್ಲಿ ಸರ್ಕಾರದ ಆದೇಶದಂತೆ ಸ್ಥಳೀಯ ಶಾಸಕರ ನೇತೃತ್ವದಲ್ಲಿ ನಗರಸಭೆ ವತಿಯಿಂದ ಏರ್ಪಡಿಸಲಾಗಿದ್ದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ೫ ಗ್ಯಾರಂಟಿಗಳನ್ನು ಸರ್ಕಾರ ಅಧಿಕಾರಕ್ಕೆ ಬಂದ ೮ ತಿಂಗಳಲ್ಲಿ ಸಂಪೂರ್ಣ ಅನುಷ್ಠಾನಕ್ಕೆ ತರಲಾಗಿದೆ. ಇದರಿಂದ ರಾಜ್ಯದಲ್ಲಿ ನಾಗರೀಕರು ಸಂತೃಪ್ತಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗೆ ಹಣ ಬಳಕೆ ಮಾಡುತ್ತಿರುವುದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಲ್ಲಿ ಹಣ ಇಲ್ಲ ಎಂಬ ವಿರೋಧ ಪಕ್ಷದ ಆರೋಪಗಳಿಗೆ ಉತ್ತರವಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಜನರ ಬಳಿಗೆ ಕರೆಸಿ, ಅವರ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪರಿಹರಿಸಲು ಅಧಿಕಾರಿಗಳು ತಾಳ್ಮೆ ವಹಿಸಿ ಕೇಳಬೇಕು. ನಂತರ ಸೂಕ್ತ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಜನರು ಇಂದು ನೀಡಿದ ಮನವಿಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಮತ್ತು ಮುಂದೆ ನಡೆಯುವ ಜನಸಂಪರ್ಕ ಸಭೆಯಲ್ಲಿ ದೂರು ಅಥವಾ ಮನವಿ ಸಲ್ಲಿಸಬೇಕಾದ ಅಗತ್ಯವಿಲ್ಲದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಹೇಳಿದರು.

ಕೆಂಪನಹಳ್ಳಿಯ ಚಂದ್ರಕಟ್ಟೆ ರುದ್ರಭೂಮಿ ಅಭಿವೃದ್ಧಿಗೆ ೩೦ ಲಕ್ಷ ರೂ ಹಾಗೂ ರಾಮನಹಳ್ಳಿಯ ರುದ್ರಭೂಮಿಗೆ ೪೦ ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಇಂದು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಗರೋತ್ಥಾನದ ಅಡಿಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ೧೮ ಕೋಟಿ ರೂ ವೆಚ್ಚದಲ್ಲಿ ಕ್ರಮವಹಿಸಲಾಗಿದೆ ಎಂದರು.

ನಗರದಲ್ಲಿ ಅತೀ ಹೆಚ್ಚು ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರು ವಾಸಿಸುವ ವಾರ್ಡ್‌ಗಳ ಅಭಿವೃದ್ಧಿಗೆ ೧೦ ಕೋಟಿ ರೂ ಬಿಡುಗಡೆಯಾಗಿದ್ದು, ರಾಮನಹಳ್ಳಿ ವಾರ್ಡ್‌ನ ಅಭಿವೃದ್ಧಿಗೆ ಸದಸ್ಯ ಲಕ್ಷ್ಮಣ್ ಕೋರಿರುವಂತೆ ೭೦ ಲಕ್ಷ ರೂಗಳನ್ನು ಮಂಜೂರು ಮಾಡುವುದಾಗಿ ಭರವಸೆ ನೀಡಿದರು.

ವಕೀಲ ನಟರಾಜ್ ಮಾತನಾಡಿ, ಗಿರಿದರ್ಶಿನಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಾರ್ಡ್‌ನ ವಿವಿಧ ಸಮಸ್ಯೆಗಳಾದ ರಾಮೇಶ್ವರ ರಸ್ತೆಯ ಯುಜಿಡಿ ಸಂಪರ್ಕ ಕಲ್ಪಿಸಬೇಕು, ರಸ್ತೆಗೆ ಲಿಂಕ್ ಅಳವಡಿಸಬೇಕು. ವಾರ್ಡ್‌ನ ಕೆಲವೆಡೆ ರಸ್ತೆ ಒತ್ತುವರಿಯಾಗಿದ್ದು ತೆರವುಗೊಳಿಸಬೇಕು.

ರಾಮನಹಳ್ಳಿಯಲ್ಲಿ ರಾಜ್ಯ ಹೆದ್ದಾರಿ ನಿರ್ಮಾಣವಾಗಿದ್ದರೂ ಇದೂವರೆಗೆ ಸಂಚಾರಿ ನಿಯಮದಂತೆ ಪಟ್ಟಿಗಳನ್ನು ಹಾಕಿಲ್ಲ, ರಸ್ತೆ ಮಧ್ಯೆಭಾಗ ಲೈಟ್‌ಗಳನ್ನು ಅಳವಡಿಸಿಲ್ಲ, ಹಂಪ್‌ಗಳನ್ನು ನಿರ್ಮಿಸಬೇಕು. ಗಾಂಧಿ ಪಾರ್ಕ್ ವೃತ್ತದ ಬಳಿ ಬಸ್ ನಿಲ್ದಾಣ ನಿರ್ಮಾಣ ಮಾಡುವುದು ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಮನವಿ ನೀಡಿ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಸದಸ್ಯರುಗಳಾದ ಲಕ್ಷ್ಮಣ, ಮಂಜುಳಾಲಕ್ಷ್ಮಣ, ಗುರುಮಲ್ಲಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಾಗರತ್ನ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.ಪ್ರಾರಂಭದಲ್ಲಿ ನಗರಸಭೆ ಪೌರಾಯುಕ್ತರಾದ ಬಸವರಾಜ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

Public relations meeting held at Ramanahalli

About Author

Leave a Reply

Your email address will not be published. Required fields are marked *