September 19, 2024

ಜಿಲ್ಲೆಯಲ್ಲಿ ಬಾಲ್ಯ ವಿವಾಹ ಸಂಪೂರ್ಣವಾಗಿ ನಿಯಂತ್ರಿಸಬೇಕು

0
ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ ಹಾಗೂ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ತ್ರೈಮಾಸಿಕ ಸಭೆ

ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ ಹಾಗೂ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ತ್ರೈಮಾಸಿಕ ಸಭೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವತೆಯಿಂದ ಕೆಲಸ ಮಾಡಿ ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ಕೌಟುಂಬಿಕ ಹಿಂಸೆಯಿಂದ ಸಂರಕ್ಷಣಾ ಕಾಯ್ದೆ ೨೦೧೫ ಹಾಗೂ ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ ಹಾಗೂ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

೨೦೨೩-೨೪ನೇ ಸಾಲಿನ ಬಾಲ್ಯ ವಿವಾಹದಲ್ಲಿ ೫೬ ದೂರುಗಳನ್ನು ಸ್ವೀಕರಿಸಿ ೫೦ ಪ್ರಕರಣಗಳನ್ನು ತಡೆಹಿಡಿದು ಉಳಿದ ೦೬ ಪ್ರಕರಣಗಳು ನ್ಯಾಯಾಲಯದ ಹಂತದಲ್ಲಿದೆ ಎಂದ ಅವರು ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳು ಹಾಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಟ ನಿವಾರಣೆ ಯೋಜನೆಯಲ್ಲಿ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಹಾಗೂ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ನೊಂದವರಿಗೆ ನ್ಯಾಯ ಸಿಗುವಂತೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಿ ಶೀಘ್ರವಾಗಿ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್, ಕಾನೂನು ಸೇವೆ, ಸಮಲೋಚನೆ ಮತ್ತು ತಾತ್ಕಾಲಿಕ ವಸತಿ ಯೋಜನೆ, ಒನ್ ಸ್ಟಾಪ್ ಸೆಂಟರ್ (ಸಖಿ) ನಲ್ಲಿ ಒದಗಿಸಲಾಗುತ್ತಿದೆ ಎಂದ ಜಿಲ್ಲಾಧಿಕಾರಿಗಳು ಅನ್ಯಾಯಕ್ಕೆ ಒಳಗಾದ ಜನರಿಗೆ ಸೂಕ್ತ ರಕ್ಷಣೆ ಮತ್ತು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಿ ಅವರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ಸಂಬಂಧಪಟ್ಟ ಅಧಿಕಾರಿಗಳು ಉದಾಸೀನ ಮಾಡದೆ ತಮ್ಮ ಕರ್ತವ್ಯಗಳನ್ನು ಮಾಡಬೇಕು. ಇಂತಹ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಜಾಗೃತಿ ಮೂಡಿಸುವಂತೆ ಯೋಜನೆಗಳನ್ನು ಕೈಕೊಳ್ಳಬೇಕು ಎಂದರು.

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ೨೦೧೭-೧೮ ಸಾಲಿನಿಂದ ಜಾರಿಯಲ್ಲಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹ ಭಾಗಿತ್ವ ಯೋಜನೆಯಲ್ಲಿ ೨೦೨೩-೨೪ನೇ ಸಾಲಿನ ಮೊದಲನೆಯ ಗರ್ಭಿಣಿಯರು ೪೮೬೦ ಗುರಿ ನಿಗಧಿಯಾಗಿದ್ದು ೪೯೪೬ ಫಲಾನುಭವಿಗಳನ್ನು ನೋಂದಾಯಿಸಿ ೮೬.೯೦ ಲಕ್ಷ ರೂಗಳನ್ನು ಹಾಗೂ ೨ನೇ ಫಲಾನುಭವಿಗಳು (ಹೆಣ್ಣು ಮಗು) ೧೬೨೩ ಗುರಿ ೪೩೪೦ ನೊಂದಾಯಿಸಿ ೧೫೪.೦ ಲಕ್ಷ ರೂಗಳು ಒಟ್ಟು ೨.೪೧ ಕೋಟಿ ರೂಗಳಲ್ಲಿ ಸಹಾಯಧನವನ್ನು ನೇರವಾಗಿ (ಡಿಬಿಟಿ)  ಮೂಲಕ ವರ್ಗಾವಣೆ ಮಾಡಲಾಗಿದೆ. ಶೇ. ೧೩೩ ಪ್ರಗತಿ ಸಾಧಿಸಿ ರಾಜ್ಯದಲ್ಲೇ ಪ್ರಥಮ ಸ್ಥಾನ ಜಿಲ್ಲೆ ಬಂದಿದೆ ಹಾಗೂ ಶಕ್ತಿ ಸದನ ಮತ್ತು ಸ್ವಾಧಾರ ಗೃಹ ಯೋಜನೆಯಡಿಯಲ್ಲಿ ನಡೆಯುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಬಾಕಿ ಇರುವ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಪುನರ್ವಸತಿ ಯೋಜನೆಯಲ್ಲಿ ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕ ಸ್ವಾವಲಂಬನೆಯನ್ನು ಹೊಂದಲು ಪ್ರೋತ್ಸಾಹ ಧನ ಕೂಡ ನೀಡಲಾಗುವುದು. ಸಮಾಜದಲ್ಲಿ ಗೌರವಾನ್ವಿತ ಜೀವನ ನಡೆಸಲು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇನ್ನು ಮುಂದೆ ಸಭೆಗೆ ಬರುವ ಅಧಿಕಾರಿಗಳು ಅಂಕಿ- ಅಂಶಗಳ  ಜೊತೆಗೆ ಸರಿಯಾದ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಸರ್ಜನ್ ಡಿಡಿಪಿಐ ಮಂಜುನಾಥ್ ಸೇರಿದಂತೆ ಜಿಲ್ಲೆಯ    ಅನುಷ್ಠಾನಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಕೀಲರ ಸಂಘದ ಅಧ್ಯಕ್ಷರಾದ ಡಿ.ಬಿ. ಸುಜೇಂದ್ರ ಹಾಗೂ ಸ್ವಯಂ ಸೇವಾ ಸಂಸ್ಥೆಯ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ರಾಜಾನಾಯಕ್ ಅವರು ಇಲಾಖೆಯ ಕಾರ್ಯಕ್ರಮಗಳ ಮಾಹಿತಿಯನ್ನು ಸಭೆಯಲ್ಲಿ ವಿವರಿಸಿದರು.

Child marriage should be completely controlled in the district

About Author

Leave a Reply

Your email address will not be published. Required fields are marked *

You may have missed