September 16, 2024

ಮುಖ್ಯ ಮಂತ್ರಿಗಳಿಂದ ಬರ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನ ಸಭೆ

0
ಮುಖ್ಯ ಮಂತ್ರಿಗಳಿಂದ ಬರ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನ ಸಭೆ

ಮುಖ್ಯ ಮಂತ್ರಿಗಳಿಂದ ಬರ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನ ಸಭೆ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯ ಮತದಾನ ರಾಜ್ಯದಲ್ಲಿ ಮುಕ್ತಾಯವಾಗಿರುವುದರಿಂದ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯಿಂದ ಸಡಿಲಿಕೆ ನೀಡಿದ್ದು, ಬರಗಾಲ ನಿರ್ವಹಣೆ ಸೇರಿದಂತೆ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಎಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಇಂದು ಗೃಹ ಕಛೇರಿ ಕೃಷ್ಣಾದಿಂದ ವಿಡಿಯೋ ಸಂವಾದದ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು

ಮುಖ್ಯಮಂತ್ರಿಗಳು ಮುಂಗಾರು ಪೂರ್ವ ಮಳೆ ಎಲ್ಲೆಡೆ ಉತ್ತಮವಾಗಿ ಆಗಿದೆ. ಈಗಾಗಿ ಬಿತ್ತನೆ ಕಾರ್ಯ ಚುರುಕಾಗಬೇಕು ಎಂದ ಅವರು ಬಿತ್ತನೆ ಬೀಜ, ರಸಗೊಬ್ಬರ, ಕೀಟ ನಾಶಕಗಳು ಎಲ್ಲಿಯು ಕೊರತೆಯಾಗದಂತೆ ನೋಡಿಕೊಳ್ಳಬೇಕು. ರಾಜ್ಯದಲ್ಲಿ ದಾಸ್ತಾನು ಸಾಕಷ್ಠಿದೆ. ಜಿಲ್ಲಾ, ತಾಲ್ಲೂಕಿಗೆ ಬೇಡಿಕೆಗನುಗುಣವಾಗಿ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಬೇಕು. ಇದಕ್ಕೆ ಸರಿಯಾಗಿ ಯೋಜನೆ ಮಾಡಿ ವಿತರಣೆ ಮಾಡಬೇಕು. ರೈತರಿಂದ ಯಾವುದೇ ದೂರು ಬಾರದಂತೆ ನೋಡಿಕೊಳ್ಳುವಂತೆ ಸೂಚಿಸಿದರು.

ಮಳೆಗಾಲ ಆರಂಭಕ್ಕೆ ೧೫-೨೦ ದಿನ ಉಳಿದಿದೆ. ಮಳೆಗಾಲ ಆರಂಭವಾದ ನಂತರ ಹೊಸ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದ್ದು, ಆರೋಗ್ಯ ಇಲಾಖೆಯು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಂಡು ಅದರ ನಿಯಂತ್ರಣಕ್ಕೆ ಮುಂದಾಗಬೇಕು. ಎಲ್ಲಿಯೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಬೇಕೆಂದ ಅವರು ನೀರು ಪೂರೈಕೆ ಮುನ್ನ ಅದು ಕುಡಿಯಲು ಯೋಗ್ಯವಾಗಿದೆಯೆ ಎಂದು ಪರೀಕ್ಷಿಸಿ ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಜಿಲ್ಲೆಯ ಕುರಿತು ಮಾಹಿತಿ ನೀಡಿ ಜಿಲ್ಲೆಯಲ್ಲಿ ಸಾಕಷ್ಟು ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ದಾಸ್ತಾನು ಇದೆ. ಬಿತ್ತನೆಗೆ ಈಗಾಗಲೇ ಎಲ್ಲಾ ಸಿದ್ದತೆ ರೈತರು ಮಾಡಿಕೊಂಡಿದ್ದಾರೆ. ಜಾನುವಾರುಗಳಿಗೆ ಬೇಕಾಗುವ ಮೇವು ಲಭ್ಯವಿದೆ ಎಂದರು.

೨೦೨೩-೨೪ನೇ ಸಾಲಿನ ಜಿಲ್ಲೆಯ ಬರಪೀಡಿತ ತಾಲ್ಲೂಕುಗಳ ೩೮,೩೯೨ ರೈತರ ಖಾತೆಗೆ ಒಟ್ಟು ರೂ. ೩೧.೩೨ ಕೋಟಿ ಬರ ಪರಿಹಾರ ಹಣವನ್ನು ಡಿ.ಬಿ.ಟಿ. ತಂತ್ರಾಂಶದ ಮೂಲಕ ರೈತರ ಖಾತೆಗೆ ಜಮೆ ಮಾಡಲಾಗಿದೆ. ರೈತರ ಖಾತೆಗೆ ಜಮೆ ಆಗಿರುವ ಹಣವನ್ನು ರೈತರ ಸಾಲಕ್ಕೆ ಕಡಿತಗೊಳಿಸದಂತೆ ಎಲ್ಲಾ ಬ್ಯಾಂಕುಗಳಿಗೆ ನಿರ್ದೇಶನ ನೀಡುವಂತೆ ಲೀಡ್ ಬ್ಯಾಂಕ್ ಮ್ಯಾನೇಜರ್ ಅವರಿಗೆ ಸೂಚಿಸಲಾಗಿದೆ ಎಂದ ಅವರು ಜಿಲ್ಲೆಯಲ್ಲಿನ ಮಲೆನಾಡು ಪ್ರದೇಶಗಳಲ್ಲಿರುವ ಕಾಲು ಸಂಕಗಳ ದುರಸ್ತಿಗೆ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

ವಿಡಿಯೋ ಸಂವಾದದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ, ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಫ್ ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಸಿ.ಎಂ. ಅವರೊಂದಿಗೆ ಭಾಗಿಯಾಗಿದ್ದರು.

ಚಿಕ್ಕಮಗಳೂರಿನಿಂದ ಜಿಲ್ಲಾಧಿಕಾರಿಗಳ ಜೊತೆಗೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Review meeting with officials on drought management by Chief Minister

About Author

Leave a Reply

Your email address will not be published. Required fields are marked *