September 16, 2024

ಜು.೧ಕ್ಕೆ ಕನ್ನಡಿಗರಿಗೆ ಉದ್ಯೋಗ ಮೀಸಲಿಡುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

0
ಕರವೇ ಜಿಲ್ಲಾಧ್ಯಕ್ಷ ಅಶೋಕ್ ಕೆಂಪನಹಳ್ಳಿ ಸುದ್ದಿಗೋಷ್ಠಿ

ಕರವೇ ಜಿಲ್ಲಾಧ್ಯಕ್ಷ ಅಶೋಕ್ ಕೆಂಪನಹಳ್ಳಿ ಸುದ್ದಿಗೋಷ್ಠಿ

ಚಿಕ್ಕಮಗಳೂರು: ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ಎಂಬ ಘೋಷಣೆಯೊಂದಿಗೆ ಜು.೧ ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಅಶೋಕ್ ಕೆಂಪನಹಳ್ಳಿ ತಿಳಿಸಿದರು.

ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿ, ರಾಜ್ಯದಲ್ಲಿ ಎಲ್ಲಾ ರೀತಿಯ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಿಡಬೇಕು ಎಂದು ಡಾ. ಸರೋಜನಿ ಮಹಿಷಿ ವರದಿಯನ್ನು ಜಾರಿಗೆ ಆಗ್ರಹಿಸಿ ಜು.೧ ರಂದು ಸೋಮವಾರ ರಾಜ್ಯಾದ್ಯಂತ ಪ್ರತಿಭಟನಾ ಧರಣಿಗೆ ಕರೆ ನೀಡಿದ್ದು, ಇದರ ಭಾಗವಾಗಿ ಅಂದು ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

ಡಾ. ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗದ ಹಿನ್ನೆಲೆಯಲ್ಲಿ ಕನ್ನಡದ ಯುವ ಸಮುದಾಯ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಹೊರ ರಾಜ್ಯಗಳಿಂದ ಆಗಮಿಸುತ್ತಿರುವ ವಲಸಿಗರ ಹಾವಳಿಯಿಂದಾಗಿ ರಾಜ್ಯದಲ್ಲಿ ಉದ್ಯೋಗಾವಕಾಶಗಳು ಕನ್ನಡಿಗರಿಗೆ ಮರೀಚಿಕೆಯಾಗಿದೆ ಎಂದು ಆರೋಪಿಸಿದರು.

ಕೈಗಾರಿಕಾ ಉದ್ಯೋಗಸ್ಥಾಯಿ ಆದೇಶ ಕಾಯ್ದೆ ೧೯೪೬ ರ ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಜೊತೆಗೆ ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ. ೧೦೦ ರಷ್ಟು ಹುದ್ದೆಗಳು ಕನ್ನಡಿಗರಿಗೆ ಒದಗಿಸುವ ಎಲ್ಲಾ ಖಾಸಗಿ ಸಂಸ್ಥೆಗಳ ಇತರೆ ಹುದ್ದೆಗಳಲ್ಲಿ ಶೇ. ೮೦ ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು, ೧೫ ವರ್ಷಗಳ ಕಾಲ ರಾಜ್ಯದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ತೇರ್ಗಡೆ ಹೊಂದಿದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕೆಂದು ಒತ್ತಾಯಿಸಿದರು.

ಈ ಸಂಬಂಧ ರಾಜ್ಯಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪಾಧಿಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸಲು ವಕೀಲರ ತಂಡವನ್ನು ಸಿದ್ದಪಡಿಸಬೇಕೆಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಕೋಟೆ ಮಲ್ಲೇಶ, ಯುವ ಘಟಕದ ಜಿಲ್ಲಾಧ್ಯಕ್ಷ ಕುಮಾರ್ ಆರ್.ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಯುವರಾಜ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರುದ್ರೇಶ್ ಸಿಂಹಾದ್ರಿ, ಭರತ್ ಉಪಸ್ಥಿತರಿದ್ದರು.

Karaway protest demanding job reservation for Kannadigas on Ju.1

About Author

Leave a Reply

Your email address will not be published. Required fields are marked *