September 19, 2024
ನಗರದ ಕೋಟೆ ಸುಗ್ಗಿ ಕಲ್ಲಿನಲ್ಲಿ ವಾಕಥಾನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಡೊಳ್ಳು ಬಾರಿಸುವ ಮೂಲಕ ಚಾಲನೆ

ನಗರದ ಕೋಟೆ ಸುಗ್ಗಿ ಕಲ್ಲಿನಲ್ಲಿ ವಾಕಥಾನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಡೊಳ್ಳು ಬಾರಿಸುವ ಮೂಲಕ ಚಾಲನೆ

ಚಿಕ್ಕಮಗಳೂರು: ಸ್ವಾತಂತ್ರ್ಯೋತ್ಸವದ ನಿಮಿತ್ತ ಜಿಲ್ಲೆಯ ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಮೂಲಕ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಇಂದು ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ಕೋಟೆ ಸುಗ್ಗಿ ಕಲ್ಲಿನಿಂದ ಜಿಲ್ಲಾಧಿಕಾರಿಗಳ ಕಛೇರಿಯ ನೆನಪಿನಂಗಳದ ವರೆಗೆ ಹಮ್ಮಿಕೊಳ್ಳಲಾಗಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರು ಹೋರಾಟಗಾರರು ಹೋರಾಡಿದ್ದಾರೆ. ಅವರನ್ನು ಸ್ಮರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಿ ಗೌರವಿಸಬೇಕು ಎಂದರು.

ಜಿಲ್ಲೆಯ ಪ್ರತಿಯೊಬ್ಬರೂ ತಮ್ಮ ಮನೆ ಮನೆಯಲ್ಲೂ ರಾಷ್ಟ್ರ ಧ್ವಜ ಹಾರಿಸಿ ಸಂಭ್ರಮಿಸಿ, ಜಿಲ್ಲಾಡಳಿತದ ವತಿಯಿಂದ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಮಾದರಿಯಾಗಿ ಯಶಸ್ವಿಗೊಳಿಸೋಣ ಎಂದು ಮನವಿ ಮಾಡಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಕೀರ್ತನಾ ಮಾತನಾಡಿ ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ರಾಷ್ಟ್ರ ಧ್ವಜ ಹಾರಿಸುವ ಮೂಲಕ ದೇಶವಾಸಿಗಳ ಹೃದಯದಲ್ಲಿ ದೇಶಭಕ್ತಿಯ ಭಾವನೆ ಮೂಡಿಸುವ ಮೂಲ ಉದ್ದೇಶ ಇದಾಗಿದೆ. ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಚಿತ್ರಕಲಾ ಶಿಬಿರ, ರಸಪ್ರಶ್ನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು, ಸಂಘ ಸಂಸ್ಥೆಗಳು ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಹೇಳಿದ ಅವರು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಹಬ್ಬದ ರೀತಿಯಲ್ಲಿ ಆಚರಿಸುವಂತೆ ಸೂಚಿಸಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಮಾತನಾಡಿ ಆಗಸ್ಟ್ ೧೫ರ ಸ್ವಾತಂತ್ರ್ಯೋತ್ಸವವನ್ನು ವಿನೂತನವಾಗಿ ಆಚರಿಸಲಾಗುತ್ತಿದೆ. ದೇಶದ ಹೆಮ್ಮೆ, ಪರಂಪರೆಯ ಬಗ್ಗೆ ಯುವಕರಿಗೆ ತಿಳಿಸುವ ನಿಟ್ಟಿನಲ್ಲಿ ವಾಕ್‌ಥಾನ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ವಾಕ್‌ಥಾನ್ ಸುಗ್ಗಿ ಕಲ್ಲಿನಿಂದ ಪ್ರಾರಂಭವಾಗಿ ಅಗ್ರಹಾರ ರಸ್ತೆ, ಕೋರ್ಟ್ ರಸ್ತೆ ಮೂಲಕ ಜಿಲ್ಲಾಧಿಕಾರಿಗಳ ಕಛೇರಿಯ ನೆನಪಿನಂಗಳ ತಲುಪಿತು. ವಾಕಥಾನ್‌ನಲ್ಲಿ ರಾಮೇದೇವರಹಳ್ಳಿಯ ರುದ್ರಪ್ಪ ಮತ್ತು ತಂಡದವರಿಂದ ವೀರಗಾಸೆ ಪ್ರದರ್ಶನ, ಎಂ.ಇ.ಎಸ್., ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್ ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ ಸಿಬ್ಬಂದಿಗಳು ವಾಕಥಾನ್‌ನಲ್ಲಿ ಭಾಗವಹಿಸಿದ್ದರು.

Fly the national flag in every house

About Author

Leave a Reply

Your email address will not be published. Required fields are marked *

You may have missed