September 16, 2024

ನೈತಿಕ ಮೌಲ್ಯಗಳ ಅರಿವು ಮೂಡಿಸುವಲ್ಲಿ ಗುರುವಿನ ಪಾತ್ರ

0
ತಾಲ್ಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನರವರ ೧೩೭ನೇ ಜನ್ಮ ದಿನೋತ್ಸವ

ತಾಲ್ಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನರವರ ೧೩೭ನೇ ಜನ್ಮ ದಿನೋತ್ಸವ

ಚಿಕ್ಕಮಗಳೂರು: ಯಾವುದೇ ವ್ಯಕ್ತಿ ಪರಿಪೂರ್ಣನಾಗುವುದು ಶಿಕ್ಷಣದ ಮೂಲಕ. ವಿದ್ಯಾರ್ಥಿಗಳಲ್ಲಿ ಸಮಾಜದ ನೈತಿಕ ಮೌಲ್ಯಗಳ ಅರಿವು ಮೂಡಿಸುವಲ್ಲಿ ಗುರುವಿನ ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನರವರ ೧೩೭ನೇ ಜನ್ಮ ದಿನೋತ್ಸವ ಮತ್ತು ೬೩ನೇ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಭಾರತದಲ್ಲಿ ಗುರುವಿಗೆ ಅಗ್ರಸ್ಥಾನವಿದೆ. ತಂದೆ-ತಾಯಿ ನಂತರ ದೈವಿಕ ಸ್ಥಾನವನ್ನು ಗುರುವಿಗೆ ನೀಡಲಾಗಿದೆ. ಹರ ಮುನಿದರೆ ಗುರು ಕಾಯುವನು, ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ನಾಣ್ನುಡಿಯಂತೆ ಗುರುವನ್ನು ಪೂಜ್ಯ ಸ್ಥಾನದಲ್ಲಿರಿಸಿ ಗೌರವಿಸುವ ಸಂಸ್ಕೃತಿ ನಮ್ಮಲ್ಲಿದೆ ಎಂದು ಹೇಳಿದರು.

ಪ್ರತಿಯೊಬ್ಬ ವ್ಯಕ್ತಿಯು ಸಮಾಜದಲ್ಲಿ ಉತ್ತಮ ನಾಗರೀಕನಾಗುವುದು ಉತ್ತಮ ಶಿಕ್ಷಣವನ್ನು ಪಡೆದಾಗ ಮಾತ್ರ, ಶಿಕ್ಷಣದ ಉದ್ದೇಶ ಅರಿವನ್ನು ಮೂಡಿಸಿವುದು ವಿದ್ಯಾರ್ಥಿಗಳಲ್ಲಿ ಸಮಾಜದಲ್ಲಿನ ಒಳಿತು ಕೆಡುಕಗಳ ಅರಿವನ್ನು ಮೂಡಿಸಿ ನೈತಿಕ ಮೌಲ್ಯಗಳ ಶಿಕ್ಷಣವನ್ನು ನೀಡುವುದರ ಮೂಲಕ ಸಮಾಜಕ್ಕೆ ಶ್ರೇಷ್ಠ ಹಾಗೂ ಸಶಕ್ತ ಪ್ರಜೆಗಳನ್ನು ನೀಡುವ ಶಿಕ್ಷಕರ ಕಾರ್ಯ ಸ್ಮರಣೀಯವಾದುದು ಎಂದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯ ಹಾಗೂ ಸಮಾಜದ ವಿಚಾರಗಳ ಅರಿವು ಮೂಡಿಸುವುದರೊಂದಿಗೆ ಪ್ರತಿ ಮಗುವಿನ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸಿ ಅವರನ್ನು ಸಮಾಜಕ್ಕೆ ಪರಿಚಯಿಸಿ ಅವರ ಬದುಕಿಗೆ ದಾರಿ ದೀಪವಾಗಿರುತ್ತಾರೆ. ಯಾವುದೇ ವ್ಯಕ್ತಿ ತನ್ನ ಗುರಿ ತಲುಪಬೇಕಾದರೆ ಗುರುವಿನ ಪಾತ್ರ ಮಹತ್ವದ್ದಾಗಿರುತ್ತದೆ ಎಂದರು.

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಬಾಲ್ಯದಲ್ಲಿ ಉತ್ತಮ ಶಿಕ್ಷಣದ ಬೀಜವನ್ನು ಭಿತ್ತಿ ಪರಿಪೂರ್ಣ ವ್ಯಕ್ತಿಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ. ಹಿಂದೆ ಗುರುಕುಲಗಳಲ್ಲಿ ಶಿಕ್ಷಣವು ಶುಲ್ಕ ರಹಿತವಾಗಿತ್ತು, ಇಂದು ಶಿಕ್ಷಣ ವ್ಯಾಪಾರವಾಗಿದೆ. ಶಿಕ್ಷಣವು ಸಮಗ್ರವಾಗಿ ವ್ಯಕ್ತಿ, ಕುಟುಂಬ, ಸಮಾಜ, ರಾಷ್ಟ್ರವನ್ನು ಜೋಡಿಸುವ ಸಾಧನವಾಗಬೇಕು.

ಅಜ್ಞಾನದಲ್ಲಿರುವವರ ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುವ ವ್ಯವಸ್ಥೆಯಾಗಬೇಕು. ಉತ್ತಮ ಶಿಕ್ಷಕನು ಜ್ಞಾನದ ಗಣಿಯಾಗಿರುತ್ತಾನೆ ಎಂದ ಅವರು. ಶಿಕ್ಷಕರು ಉತ್ತಮ ಮಾರ್ಗದರ್ಶನವನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿ ಕೊಡಬೇಕು ಎಂದರು.

ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಆದರ್ಶ ಗುರು, ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣರವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವಸಲುವಾಗಿ ಅವರ ಜನ್ಮ ದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ಹುಟ್ಟಿನಿಂದ ಮರಣದವರೆಗೂ ಪ್ರತಿಯೊಂದು ಹಂತದಲ್ಲಿಯೂ ಶಿಕ್ಷಕರ ಮಾರ್ಗದರ್ಶನ ಅವಶ್ಯಕವಾಗಿದೆ. ಒಬ್ಬ ವ್ಯಕ್ತಿಯ ಸಾಮರ್ಥ್ಯವನ್ನು ಸಮಾಜಕ್ಕೆ ಉತ್ತಮ ರೀತಿಯಲ್ಲಿ ಪರಿಚಯಿಸುವ ಜವಾಬ್ದಾರಿ ಶಿಕ್ಷಕರ ಮೇಲಿರುತ್ತದೆ ಎಂದ ಅವರು. ಶಿಕ್ಷಕರು ತಮ್ಮ ಜವಾಬ್ದಾರಿಯನ್ನಾರಿತು ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸಿ ಎಂದರು.

ಕರ್ನಾಟಕ ಸರ್ಕಾರದ ರಾಜ್ಯಪಾಲರು ತಾವರ್ ಚಂದ್ ಗೇಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಡಿ. ತಮ್ಮಯ್ಯ ಹಾಗೂ ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಭೋಜೇಗೌಡ ಅವರು ಶಿಕ್ಷಕ ದಿನಾಚರಣೆಯ ಅಂಗವಾಗಿ ಕಳುಹಿಸಿದ ಶುಭ ನುಡಿಗಳನ್ನು ಕಾರ್ಯಕ್ರಮದಲ್ಲಿ ಶಿಕ್ಷಕರು ಓದಿದರು.

ಈ ಸಂದರ್ಭದಲ್ಲಿ ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್, ಕ್ಷೇತ್ರ ಸಮನ್ವಯಾಧಿಕಾರಿ ನಾಗರಾಜ್, ಜಿಲ್ಲಾ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ವಿವಿಧ ಶಿಕ್ಷಕರ ಸಂಘದ ಅಧ್ಯಕ್ಷ ಕಾರ್ಯದರ್ಶಿಗಳು ಸೇರಿದಂತೆ ತಾಲ್ಲೂಕಿನ ವಿವಿಧ ಶಾಲಾ ಶಿಕ್ಷಕರು ಹಾಜರಿದ್ದರು.

Taluk level Dr. 137th birth anniversary of Sarvapalli Radhakrishna

About Author

Leave a Reply

Your email address will not be published. Required fields are marked *