September 20, 2024

ಅಕ್ಟೋಬರ್‌ನಲ್ಲಿ ರಾಜ್ಯ ಮಟ್ಟದ ಸೇವಾದಳ ಸಮಾವೇಶ

0
ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸೇವಾದಳ ವತಿಯಿಂದ ನಡೆದ ಬ್ಲಾಕ್ ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆ

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸೇವಾದಳ ವತಿಯಿಂದ ನಡೆದ ಬ್ಲಾಕ್ ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆ

ಚಿಕ್ಕಮಗಳೂರು: ರಾಜ್ಯ ಮಟ್ಟದ ಸೇವಾದಳ ಸಮಾವೇಶವನ್ನು ಈ ತಿಂಗಳ ಅಕ್ಟೋಬರ್ ನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ತಿಳಿಸಿದರು.

ಅವರು ಶನಿವಾರ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸೇವಾದಳ ವತಿಯಿಂದ ನಡೆದ ಬ್ಲಾಕ್ ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ರಾಜ್ಯದ ಆಯಾ ಜಿಲ್ಲೆಗಳಲ್ಲಿ ಸೇವಾದಳ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು, ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಸೇವಾದಳ ಕಾರ್ಯಕರ್ತರು ಶ್ರಮಿಸುವಂತೆ ಮನವಿ ಮಾಡಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ೨೦೦ ಜನ ಸಮವಸ್ತ್ರವುಳ್ಳ ಸೇವಾದಳ ಕಾರ್ಯಕರ್ತರನ್ನು ಸಮ್ಮೇಳನಕ್ಕೆ ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷರು ಸಜ್ಜುಗೊಳಿಸಬೇಕು. ಎನ್.ಎಸ್.ಯು.ಐ, ಮಹಿಳಾ ಕಾಂಗ್ರೆಸ್ ಮತ್ತು ಸೇವಾದಳ ಕಾರ್ಯಕರ್ತರು ಸಮ್ಮೇಳನದ ಯಶಸ್ವಿಗೆ ಮುಂದಾಗುವಂತೆ ಕರೆ ನೀಡಿದರು.

ಕೆಲವೇ ತಿಂಗಳುಗಳಲ್ಲಿ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಗಳು ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಜನಪರವಾದ ಯೋಜನೆಗಳು ಜಾರಿಯಾಗಿರುವುದನ್ನು ಜನಸಾಮಾನ್ಯರಿಗೆ ಮನಮುಟ್ಟುವಂತೆ ಪಕ್ಷದ ಕಾರ್ಯಕರ್ತರು ತಿಳಿಸುವಂತೆ ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರನ್ನು ಈ ಬಾರಿ ಪ್ರಧಾನಿ ಮಾಡಬೇಕೆಂದು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಅವರ ಗೆಲುವಿಗಾಗಿ ತಳಮಟ್ಟದಿಂದ ಪಕ್ಷವನ್ನು ಸದೃಢಗೊಳಿಸುವುದರ ಜೊತೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಸೇವಾದಳ ಜಿಲ್ಲೆಯಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ. ಜಿಲ್ಲಾ ಸಮಿತಿ ರಚಿಸುವುದರ ಜೊತೆಗೆ ಮಹಿಳಾ ಘಟಕವನ್ನು ರಚಿಸಲು ಸೇವಾದಳ ರಾಜ್ಯಾಧ್ಯಕ್ಷರು ಮುಂದಾಗುವಂತೆ ತಿಳಿಸಿದರು.

ಸಂಘಟನೆಗೆ ಪೂರಕವಾಗಿ ಜಿಲ್ಲೆಯ ವಿವಿಧ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ಸಿದ್ದಾಂತ ಮತ್ತು ವಿಚಾರದಾರೆಯನ್ನು ಮನೆ ಮನೆಗೆ ಭೇಟಿ ನೀಡುವುದರ ಜೊತೆಗೆ ಜನರಿಗೆ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದರು.
ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇವಾದಳ ಸಮ್ಮೇಳನದ ಯಶಸ್ಸಿಗೆ ಕೈಜೋಡಿಸಲಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಪಕ್ಷ ಸಂಘಟಿಸುವ ಕೆಲಸಕ್ಕೆ ದುಡಿಯುವಂತೆ ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ, ಸೇವಾದಳಕ್ಕೆ ಇರುವ ಗೌರವ ಕಾಂಗ್ರೆಸ್ ಪಕ್ಷದ ಯಾವುದೇ ಘಟಕಕ್ಕೆ ಇಲ್ಲ. ಸೇವಾದಳದಿಂದ ಶಿಸ್ತು, ಗೌರವ ಬರುತ್ತದೆ. ಸೇವಾದಳದಲ್ಲಿ ಕನಿಷ್ಠ ಒಂದು ವರ್ಷವಾದರೂ ಸೇವೆ ಮಾಡುವ ಸೇವಾ ಮನೋಭಾವವನ್ನು ಕಾರ್ಯಕರ್ತರು ಬೆಳೆಸಿಕೊಳ್ಳಬೇಕು ಎಂದರು.

ಸೇವಾದಳದಿಂದ ವಿಚಾರಧಾರೆಗಳನ್ನು ಬೆಳೆಸಿಕೊಳ್ಳಬಹುದು. ಸೇವಾದಳ ಶ್ರೇಷ್ಟವಾದ ಸಂಸ್ಥೆ ಅದನ್ನು ಉಳಿಸಿ ಬೆಳೆಸುವುದರ ಜೊತೆಗೆ ಕಾಂಗ್ರೆಸ್ ಪಕ್ಷದ ಸಾಧನೆಯನ್ನು ಹಳ್ಳಿ ಹಳ್ಳಿಗಳಲ್ಲಿ ತಿಳಿಸುವ ಕಾರ್ಯಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಂದಾಗಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಜಿಲ್ಲಾ ಕಾಂಗ್ರೆಸ್ ಸೇವಾದಳ ಜಿಲ್ಲಾಧ್ಯಕ್ಷ ಆರ್.ಎಂ.ಬಸವರಾಜು, ಸೇವಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್, ನಗರಸಭಾ ಸದಸ್ಯ ಪರಮೇಶ್ ರಾಜ್ ಅರಸ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೃದೀಪ್, ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಶ್ರೀಕಾಂತ್, ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾದ ಕೆ.ಎಂ.ಸಿದ್ದಪ್ಪ, ಧರ್ಮರಾಜ್, ಜಿ.ಬಿ.ಅರುಣ್, ಬಿ.ಎಂ.ಲೋಹಿತ್, ಶೇಖರ್ ರಾಜ್, ಸೇವಾದಳ ಪ್ರಧಾನ ಕಾರ್ಯದರ್ಶಿ ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

State Level Seva Dal Convention in October

About Author

Leave a Reply

Your email address will not be published. Required fields are marked *