September 19, 2024

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತ ಕ್ರಮ ವಹಿಸಿ

0
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್.

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ಅಧಿಕಾರಿಗಳು ಮುಂಜಾಗ್ರತೆಯಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಿನ್ನೆ ಬರ ನಿರ್ವಹಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ಕಡೂರು ಹಾಗೂ ಅಜ್ಜಂಪುರ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಹಾಗೂ ಕೊಪ್ಪ, ನರಸಿಂಹರಾಜಪುರ, ಶೃಂಗೇರಿ, ಮೂಡಿಗೆರೆ ಹಾಗೂ ಕಳಸ ತಾಲ್ಲೂಕುಗಳನ್ನು ಸಾಧರಣ ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಅದರಂತೆ ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಪೂರೈಕೆಯಲ್ಲಿ ವೇತ್ಯಯವಾಗದಂತೆ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದ ಅವರು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ಅವರುಗಳು ಕೂಡಲೇ ಎಲ್ಲ ತಾಲ್ಲೂಕು ಅಧಿಕಾರಿಗಳ ಸಭೆ ನಡೆಸಿ ಪ್ರತಿ ಹಳ್ಳಿಗಳ ಮಾಹಿತಿ ಪಡೆದು ಅಲ್ಲಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಹಾಗೂ ಸಾಂಕ್ರಮಿಕ ರೋಗಗಳ ಬಗ್ಗೆ ಎಚ್ಚರ ವಹಿಸುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಹಳೇ ಬೋರ್ ವೆಲ್‌ಗಳನ್ನು ಮರುಪೂರಣಗೊಳಿಸುವಂತೆ ತಿಳಿಸಿದ ಅವರು ಕುಡಿಯುವ ನೀರಿನ ಸಮಸ್ಯೆಗಳು ಇರುವ ಗ್ರಾಮಗಳಲ್ಲಿ ಖಾಸಗಿ ಬೋರೆ ವೆಲ್‌ಗಳನ್ನು ವಶಕ್ಕೆ ಪಡೆದು ಆ ಮೂಲಕ ಗ್ರಾಮಗಳಿಗೆ ನೀರು ಒದಗಿಸಬೇಕು. ಖಾಸಗಿ ಬೋರೆವೆಲ್ ಲಭ್ಯವಿಲ್ಲದೆ ಹೋದಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲು ಯೋಜನೆ ರೂಪಿಸಿಕೊಳ್ಳಬೇಕು. ಕೃಷಿ ಕುಡಿಯುವ ನೀರಿಗೆ ಸಮರ್ಪಕ ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕ್ ತೆರೆಯಲು ಸರ್ವೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲು ಎಲ್ಲ ತಾಲ್ಲೂಕು ತಹಸೀಲ್ದಾರ್‌ಗಳು ನೋಡಲ್ ಅಧಿಕಾರಿಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಬರ ನಿರ್ವಹಣೆ ಕುರಿತು ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಲ್ಲೂಕು ಅಧಿಕಾರಿಗಳು ನರೇಗ ಯೋಜನೆಯಲ್ಲಿ ಗ್ರಾಮಗಳ ಕೆರೆ ಒತ್ತುವರಿ, ಕೆರೆ ನಿರ್ವಹಣೆ, ಸ್ಮಶಾನ ಅಭಿವೃದ್ಧಿ ಹಾಗೂ ಒತ್ತುವರಿ ಕುಡಿಯುವ ನೀರಿನ ಯೋಜನೆಗಳು, ಹಾಗೂ ಚೆಕ್ ಡ್ಯಾಂಗಳನ್ನು ನಿರ್ಮಿಸುವುದು ಸೇರಿದಂತೆ ನರೇಗ ಯೋಜನೆ ಹಾಗೂ ಬರ ನಿರ್ವಹಣೆ ಯೋಜನೆಯಲ್ಲಿ ಹಲವು ಉಪಯುಕ್ತ ಕಾರ್ಯಕ್ರಮಗಳ ಯೋಜನಾ ಪಟ್ಟಿ ಸಿದ್ದಪಡಿಸಿ ಶೀಘ್ರವಾಗಿ ಸಲ್ಲಿಸಬೇಕು. ಗ್ರಾಮ ಪಂಚಾಯಿತಿಗಳ ಮೂಲಕ ಗರಿಷ್ಠ ದಿನಗಳ ಉದ್ಯೋಗ ಸೃಷ್ಠಿಯಾಗುವಂತೆ ಯೋಜನೆಗಳನ್ನು ರೂಪಿಸಬೇಕು ಹಾಗೂ ನಮ್ಮ ಜಿಲ್ಲೆಯಿಂದ ಜಾನುವಾರುಗಳ ಮೇವನ್ನು ಹೊರ ಜಿಲ್ಲೆ ಅಥವಾ ಹೊರ ರಾಜ್ಯಕ್ಕೆ ಸರಬರಾಜು ಆಗುವುದನ್ನು ತಡೆಗಟ್ಟಬೇಕು ಎಂದರು.

ಈ ಬಗ್ಗೆ ಎಲ್ಲ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಿ ನಮ್ಮ ಜಿಲ್ಲೆಯ ಗಡಿ ಭಾಗದ ಚೆಕ್ ಪೋಸ್ಟ್‌ಗಳ ಬಳಿ ನಿಗಾ ವಹಿಸಿಬೇಕು ಎಂದ ಅವರು ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಮೇವನ್ನು ಎಲ್ಲಿಯು ಸಾಗಟಕ್ಕೆ ಅವಕಾಶ ಕಲ್ಪಿಸಬಾರದು. ಕೃಷಿ, ತೋಟಗಾರಿಕೆ ಮತ್ತಿತರ ಬೆಳೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಕಲೆ ಹಾಕಲು ಅಧಿಕಾರಿಗಳು ಸ್ಥಳಗಳಿಗೆ ಭೇಟಿ ಮಾಡಿ ಸಾಧ್ಯವಾದಷ್ಟು ತಾಲ್ಲೂಕು ಮಟ್ಟದ ಅಧಿಕಾರಿಗಳು ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಮಾಡಿ ಮಾಹಿತಿ ಕಲೆ ಹಾಕಿ ಅವುಗಳ ನಿವಾರಣೆಗೆ ಮುಂದಾಗ ಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರಡ್ಡಿ, ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Take precautionary measures so that drinking water does not become a problem in the district

About Author

Leave a Reply

Your email address will not be published. Required fields are marked *

You may have missed