September 19, 2024

ಕಳೆದ ಬಜೆಟ್‌ನಲ್ಲಿ ಮೀಸಲಿಟ್ಟಿದ್ದ ಅನುದಾನ ಕಡಿಮೆ ಮಾಡದೆ ಅಭಿವೃದ್ಧಿ

0
ಕಲ್ಯಾಣ ನಗರದ ನೀಲಾಂಬಿಕ ರಸ್ತೆಯಲ್ಲಿ ನಗರೋತ್ತಾನದ ೪ನೇ ಹಂತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಲ್ಯಾಣ ನಗರದ ನೀಲಾಂಬಿಕ ರಸ್ತೆಯಲ್ಲಿ ನಗರೋತ್ತಾನದ ೪ನೇ ಹಂತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು:  ಕಳೆದ ಬಜೆಟ್‌ನಲ್ಲಿ ಮೀಸಲಿರಿಸಲಾಗಿದ್ದ ಅನುದಾನವನ್ನು ಕಡಿಮೆ ಮಾಡದೆ ಮುಖ್ಯ ಮಂತ್ರಿಗಳು ಬಿಡುಗಡೆ ಮಾಡಿ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಇಂಧನ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.

ಅವರು ಇಂದು ನಗರದ ಬೈಪಾಸ್ ರಸ್ತೆಯ ಕಲ್ಯಾಣ ನಗರದ ನೀಲಾಂಬಿಕ ರಸ್ತೆಯಲ್ಲಿ ನಗರೋತ್ತಾನದ ೪ನೇ ಹಂತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ೫ ಗ್ಯಾರಂಟಿ ಯೋಜನೆಗಳನ್ನು ೪೫ ಸಾವಿರ ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಲಾಗಿದ್ದು, ಇದಕ್ಕೂ ಬಜೆಟ್‌ಗೂ ಯಾವುದೇ ಸಂಬಂಧ ಇಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಬದ್ದತೆಯಿಂದ ಕೆಲಸ ಮಾಡುತ್ತಿದ್ದು, ಸಂಕಷ್ಟದಲ್ಲಿದ್ದ ಬಡವರು, ಮಧ್ಯಮ ವರ್ಗದ ಜನರನ್ನು ಆರ್ಥಿಕವಾಗಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿವಾರಣೆ ಮಾಡಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಇಂಧನ ಇಲಾಖೆಯಿಂದ ಸುಮಾರು ೧.೬೫ ಕೋಟಿ ಜನರಿಗೆ ಉಚಿತ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಗೃಹಜ್ಯೋತಿ ಈ ಯೋಜನೆಯಡಿ ಹಿಂದೆ ಅರ್ಜಿ ಸಲ್ಲಿಸದೆ ಬಾಕಿ ಇರುವವರು ಈಗಲೂ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.

ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಅವರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ. ಅದೇ ರೀತಿ ಶಕ್ತಿ ಯೋಜನೆಯಿಂದ ೬೦ ಲಕ್ಷ ಮಹಿಳೆಯರು ಪ್ರಯೋಜನ ಪಡೆಯುತ್ತಿದ್ದಾರೆ. ಇದರಿಂದ ದೇವಾಲಯಗಳ ಹುಂಡಿಯಲ್ಲಿ ಹೆಚ್ಚು ಹಣ ಸಂಗ್ರಹವಾಗುತ್ತಿದೆ ಎಂದು ಹೇಳಿದರು.

ಅನ್ನಭಾಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಇದಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ ಎಂದು ಆರೋಪಿಸಿ ಅವರು ೫ ಕೆ.ಜಿ ಅಕ್ಕಿ ಜೊತೆಗೆ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ ೧೭೦ ರೂ ಅಂತೆ ಅವರ ಖಾತೆಗೆ ಡಿಬಿಟಿ ಮೂಲಕ ಹಣ ಸಂದಾಯ ಮಾಡಲಾಗಿದೆ. ಯುವನಿಧಿ ಯೋಜನೆಯನ್ನು ಈಗಾಗಲೇ ಚಾಲನೆ ನೀಡಿದ್ದು, ಇದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗದಂತೆ ಕ್ರಮ ವಹಿಸುವುದಾಗಿ ತಿಳಿಸಿದರು.

ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸಿದ ಪರಿಣಾಮದಿಂದ ಅವರ ಎಲ್ಲಾ ಹಣ ಮಾರುಕಟ್ಟೆಗೆ ಬರುತ್ತಿದೆ. ವ್ಯಾಪಾರ ವಹಿವಾಟು ಹೆಚ್ಚಾಗುತ್ತಿದ್ದಂತೆ ಉತ್ಪಾದನೆಯೂ ಹೆಚ್ಚಳವಾಗುತ್ತದೆ. ಇದರಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯ ಬರುತ್ತದೆ ಎಂದರು.

ಜಿಲ್ಲೆಯಲ್ಲಿ ೫ ಕಾಂಗ್ರೆಸ್ ಪಕ್ಷದ ಶಾಸಕರನ್ನು ಆಯ್ಕೆ ಮಾಡಿರುವುದರಿಂದ ನನ್ನ ಜವಾಬ್ದಾರಿ, ಕೆಲಸ ಕಾರ್ಯಗಳು ಸುಲಭವಾಗಿದೆ. ಜೊತೆಗೆ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಶೇ. ೯೦ ರಷ್ಟು ಜಿಲ್ಲೆಯಲ್ಲಿ ಉತ್ತಮ ಅಧಿಕಾರಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಈ ಮೂಲಕ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ಸಲಹೆ ಸಹಕಾರ ಖಂಡಿತಾ ಇರುತ್ತದೆ ಎಂದು ಭರವಸೆ ನೀಡಿದರು.

ಶಾಸಕ ಹೆಚ್.ಡಿ ತಮ್ಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಈ ರಸ್ತೆ ಕಾಮಗಾರಿಯನ್ನು ಸುಮಾರು ೨೦ ಕೋಟಿ ರೂ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ, ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಉಪಾಧ್ಯಕ್ಷ ಅಮೃತೇಶ್ ಚನ್ನಕೇಶವ, ಜಿಲ್ಲಾಧಿಕಾರಿ ಮೀನಾ ನಾಗರಾಜ್. ಎಸ್ಪಿ ಡಾ|| ವಿಕ್ರಮ ಅಮಟೆ, ಯೋಜನಾ ನಿರ್ದೇಶಕರಾದ ನಾಗರತ್ನ ಪೌರಾಯುಕ್ತ ಬಿ.ಸಿ ಬಸವರಾಜ್ ಸೇರಿದಂತೆ ನಗರಸಭೆಯ ಸ್ಥಳೀಯ ಸದಸ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Guddali Puja for various development works of the 4th phase of Nagrottana

About Author

Leave a Reply

Your email address will not be published. Required fields are marked *

You may have missed