September 20, 2024

ವಿಶ್ವಗುರು ಬಸವಣ್ಣ ಎಲ್ಲಾ ಕಛೇರಿಗಳಲ್ಲಿ ಭಾವಚಿತ್ರ ಅಳವಡಿಸಲು ಕ್ರಮ

0
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ

ಚಿಕ್ಕಮಗಳೂರು:  ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿದ್ದು ಎಲ್ಲಾ ಕಛೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ. ಎನ್. ಹೇಳಿದರು.

ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಫೆಬ್ರವರಿ ೧೩ ರಂದು ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಅನಾವರಣಗೊಳಿಸಿದ್ದಾರೆ. ಅದರಂತೆ ಫೆಬ್ರವರಿ ೧೭ ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ, ತಾಲ್ಲೂಕು ಕೇಂದ್ರಗಳಲ್ಲಿ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸುವಂತೆ ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಫೆಬ್ರವರಿ ೧೭ ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಈಗಾಗಲೇ ಆಯಾ ತಾಲ್ಲೂಕುಗಳ ತಹಸೀಲ್ದಾರರುಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನೃತ್ಯ ರೂಪಕ, ಬಸವಣ್ಣನವರ ವಚನಗಳು, ಗಮಕ ಶೈಲಿಯಲ್ಲಿ ಮೂಡಿ ಬರಲಿದ್ದು, ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಲು ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸೋಮಶೇಖರ್ ಹಾಗೂ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.

ಭಾವಚಿತ್ರ ಅನಾವರಣ ಸಮಾರಂಭ: ಜಿಲ್ಲಾಡಳಿತ ವತಿಯಿಂದ ಫೆಬ್ರವರಿ ೧೭ ರಂದು ಬೆ. ೧೧.೦೦ ಗಂಟೆಗೆ ನಗರದ ಕುವೆಂಪು ಕಲಾ ಮಂದಿರದಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕರಾದ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಉದ್ಘಾಟನೆ ಮಾಡಲಿದ್ದಾರೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಗೌರವಾನ್ವಿತ ಘನ ಉಪಸ್ಥಿತರಿರಲಿದ್ದಾರೆ, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಡಿ. ರಾಜೇಗೌಡ ಮತ್ತು ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ|| ಆರತಿಕೃಷ್ಣ ಘನ ಉಪಸ್ಥಿತರಿರಲಿದ್ದಾರೆ, ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹೆಚ್.ಡಿ. ತಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯ ಸಭಾ ಸಂಸದರಾದ ಜೈರಾಮ್ ರಮೇಶ್, ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ಶಾಸಕರುಗಳಾದ ಶ್ರೀನಿವಾಸ್ ಜಿ.ಹೆಚ್., ಕೆ.ಎಸ್. ಆನಂದ್, ನಯನ ಮೋಟಮ್ಮ, ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಭೋಜೇಗೌಡ, ಹಾಗೂ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Action to install Vishwaguru Basavanna’s portrait in all offices

About Author

Leave a Reply

Your email address will not be published. Required fields are marked *