September 20, 2024

ವ್ಯಸನಮುಕ್ತ ಸಮಾಜಕ್ಕೆ ಶ್ರಮಿಸಿದ ಶ್ರೀ ಮಹಾಂತ ಶಿವಯೋಗಿಗಳು

0
ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ

ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ

ಚಿಕ್ಕಮಗಳೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಡಾ. ಮಹಾಂತ ಶಿವಯೋಗಿಗಳ ತತ್ವಾದರ್ಶಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕಮಗಳೂರು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರ ಸಹಯೋಗದೊಂದಿಗೆ ನಗರದ ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್ ಸಭಾಂಗಣದಲ್ಲ್ಲಿ ಡಾ|| ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಾ. ಮಹಾಂತ ಶಿವಯೋಗಿ ಅವರ ಜನ್ಮ ದಿನವಾದ ಆಗಸ್ಟ್ ೦೧ ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನಮುಕ್ತ ದಿನವನ್ನಾಗಿ ಆಚರಿಸುತ್ತಿದ್ದು, ಸಾರ್ವಜನಿಕರು ಹಾಗೂ ಯುವ ಜನತೆ ವ್ಯಸನಗಳಿಂದ ಮುಕ್ತರಾಗಲು ಈ ದಿನಾಚರಣೆ ಪ್ರೇರಣೆಯಾಗಿದೆ.
ವ್ಯಸನಮುಕ್ತ ಕುಟುಂಬ, ಸಮಾಜ, ಗ್ರಾಮಗಳ ನಿರ್ಮಾಣ ಮಾಡುವ ಜೊತೆಗೆ ತಮ್ಮ ಜೋಳಿಗೆ ಕಾರ್ಯಕ್ರಮದಲ್ಲಿ ನಾಡಿನ ಪ್ರಖ್ಯಾತ ವೈದ್ಯರು, ಸಮಾಜ ವಿಜ್ಞಾನಿಗಳು, ಸಾಹಿತಿಗಳು ಸಮಾಜ ಕಳಕಳಿಯ ಕವಿಗಳು ಧರ್ಮಗುರುಗಳನ್ನು ಆಹ್ವಾನಿಸಿ ಅವರಿಂದ ಉಪನ್ಯಾಸ ಮಾಡಿಸುವ ಮೂಲಕ ವ್ಯಸನಿಗಳ ಮನಪರಿವರ್ತನೆ ಮಾಡುವುದರ ಜೊತೆಗೆ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ಚಟಗಳಿಗೆ ಬಲಿಯಾಗದಂತೆ ಅರಿವು ಮೂಡಿಸುತ್ತಿದ್ದರು ಎಂದರು.

ಯುವ ಪೀಳಿಗೆಯು ತಮ್ಮ ಉತ್ತಮ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯಯುತ ಜೀವನಕ್ಕೆ ಒತ್ತು ನೀಡಬೇಕು. ದುಶ್ಚಟಗಳಿಗೆ ಬಲಿಯಾದರೆ ತಮ್ಮ ಆರೋಗ್ಯ ಹದಗೆಡುವುದಲ್ಲದೆ. ಇಡೀ ಕುಟುಂಬ ಸಂಕಷ್ಟ ಎದುರಿಸಬೇಕಾಗುತ್ತದೆ. ದುಶ್ಚಟಗಳನ್ನು ಬಿಡುವುದರಿಂದ ದೈಹಿಕ ಆರೋಗ್ಯ ಸುಧಾರಣೆಯಾಗುತ್ತದೆ. ಜೊತೆಗೆ ಆರ್ಥಿಕವಾಗಿ ಸದೃಢರಾಗಲು ಸಾಧ್ಯವಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ಮಾತನಾಡಿ ಯುವ ಜನತೆ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ದುಶ್ಚಟಗಳಿಗೆ ಬಲಿಯಾಗಬಾರದು. ತಮ್ಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕು. ತಮ್ಮ ನೆರೆ ಹೊರೆಯವರಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಡಿವೈಎಸ್‌ಪಿ ಶೈಲೇಂದ್ರ ಮಾತನಾಡಿ ಮಾದಕ ವಸ್ತುಗಳು, ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಂದ ಯುವ ಜನತೆ ದೂರವಿರಬೇಕು, ಧೂಮಪಾನ, ಜರ್ದಾ, ಗುಟ್ಕಾ ಸೇವನೆಯಿಂದ ಶ್ವಾಸಕೋಶ, ಬಾಯಿ ಕ್ಯಾನ್ಸರ್ ಉಂಟಾಗುತ್ತದೆ. ಆದ್ದರಿಂದ ಯುವ ಜನರು ಎಲ್ಲಾ ರೀತಿಯ ವ್ಯಸನಗಳಿಂದ ದೂರ ಉಳಿಯಬೇಕು ಎಂದು ತಿಳಿಸಿದರು.

ನಿವೃತ್ತ ಉಪನ್ಯಾಸಕರು ಹಾಗೂ ಸಾಹಿತಿ ತಿಪ್ಪೇರುದ್ರಪ್ಪ ಉಪನ್ಯಾಸ ನೀಡಿ ಡಾ. ಮಹಾಂತ ಶಿವಯೋಗಿಗಳು ದುಶ್ಚಟಗಳು, ದುರ್ವ್ಯಸನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ ಜನರಲ್ಲಿನ ದುಶ್ಚಟಗಳನ್ನು ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜಕ್ಕೆ ಶ್ರಮಿಸಿದರಲ್ಲದೇ ದೇಶ ವಿದೇಶಗಳಲ್ಲೂ ಕೂಡ ಜಾಗೃತಿ ಮೂಡಿಸಿದರು.

ಅನ್ನದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ ಸೇರಿದಂತೆ ಹಲವಾರು ಸಾಮಾಜಿಕ ಸುಧಾರಣಾ ಕಾರ್ಯಗಳನ್ನು ಮಾಡಿದರು ಎಂದು ಹೇಳಿದರು.

ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಎಂ.ವಿ. ಶ್ಯಾಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜೆ. ಮಂಜೇಗೌಡ ಪ್ರತಿಜ್ಞಾ ವಿಧಿ ಭೋಧಿಸಿದರು. ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್‌ನ ಹೇಮಾವತಿ ಮತ್ತು ಸಂಗಡಿಗರು ಪ್ರಾರ್ಥಿಸಿ, ನಾಡಗೀತೆ ಹಾಡಿದರು. ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ಜಿ. ಉಮೇಶ್ ಎಲ್ಲರನ್ನು ಸ್ವಾಗತಿಸಿದರು. ಸಹಾಯಕ ಗ್ರಂಥ ಪಾಲಕ ಮಹೇಶಪ್ಪ ನಿರೂಪಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವ್ಯಸನಮುಕ್ತ ದಿನಾಚರಣೆ ಅಂಗವಾಗಿ ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಆರೋಗ್ಯ ಶಿಬಿರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ತಹಸೀಲ್ದಾರ್ ಡಾ. ಸುಮಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರ್‌ಸಿಹೆಚ್‌ಒ ಡಾ. ಮಂಜುನಾಥ್, ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್‌ನ ನಿವೃತ್ತ ಪ್ರಾಂಶುಪಾಲ ಓಂಕಾರಸ್ವಾಮಿ, ವಾರ್ತಾ ಇಲಾಖೆ ಸಿಬ್ಬಂದಿಗಳಾ ಬಿ.ಆರ್. ರವೀಂದ್ರ, ಪ್ರಸನ್ನ, ಐಶ್ವರ್ಯ, ವೆಂಕಟರಾಮು ಹಾಗೂ ಡಿ.ಎ.ಸಿ.ಜಿ. ಸರ್ಕಾರಿ ಪಾಲಿಟೆಕ್ನಿಕ್‌ನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Addiction Free Day Program

About Author

Leave a Reply

Your email address will not be published. Required fields are marked *